ಕಡಲ ತೆರೆಗಳಿಂದ ಮಿಂಚು

– ಪ್ರಶಾಂತ ಸೊರಟೂರ.

kaDal-minchu

ಕಲ್ಲಿದ್ದಲು, ಪೆಟ್ರೋಲಿಯಂ ಮುಂತಾದ ಮುಗಿದು ಹೋಗಬಹುದಾದಂತಹ ಉರುವಲುಗಳ ಬದಲಾಗಿ ಮುಗಿದು ಹೋಗಲಾರದಂತಹ ಮತ್ತು ಸುತ್ತಣಕ್ಕೆ ಕಡಿಮೆ ತೊಂದರೆಯನ್ನುಂಟು ಮಾಡುವಂತಹ ಕಸುವಿನ ಸೆಲೆಗಳ ಅರಕೆ ಜಗತ್ತಿನೆಲ್ಲೆಡೆ ಎಡೆಬಿಡದೇ ಸಾಗಿದೆ.

ಈ ನಿಟ್ಟಿನಲ್ಲಿ ಗುಡ್ಡ-ಬೆಟ್ಟದ ಮೇಲೆ ಬೀಸುವ ಗಾಳಿ ಇಲ್ಲವೇ ನೇಸರನ ಬೆಳಕಿನಿಂದ ಮಿಂಚು (ಕರೆಂಟ್) ಉಂಟುಮಾಡುವ ಹೊಸ ಸಲಕರಣೆಗಳನ್ನು ಹಲವಾರು ಕಡೆ ಅಳವಡಿಸಲಾಗುತ್ತಿದೆ. ಇದರಂತೆ ಇತ್ತೀಚಿಗೆ ಬಳಕೆಗೆ ತರಲಾಗುತ್ತಿರುವ ಕಸುವಿನ ಇನ್ನೊಂದು ಸೆಲೆಯೆಂದರೆ ಕಡಲ ತೆರೆಗಳನ್ನು ಬಳಸಿ ಕರೆಂಟ್ ಉಂಟುಮಾಡುವುದು.

ದಂಡೆಯಲ್ಲಿ ಹೊಯ್ದಾಡುವ ತೆರೆಗಳನ್ನು ಇಲ್ಲವೇ ಕಡಲ ನಡುವೆ ಏಳುವ ದೊಡ್ಡ ಅಲೆಗಳು ಹೊಮ್ಮಿಸುವ ಕಸುವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವಂತಾದರೆ ಜಗತ್ತಿನ ಹಲವು ನಾಡುಗಳಿಗೆ ಯಾವುದೇ ಅಡೆತಡೆ ಇಲ್ಲದೇ ಮಿಂಚು (ಕರೆಂಟ್) ನೀಡಬಹುದೆಂದು ಎಣಿಕೆಮಾಡಲಾಗಿದೆ. ಆದರೆ ಬಿರುಸಾಗಿ ಅಪ್ಪಳಿಸುವ ಕಡಲ ಅಲೆಗಳನ್ನು ತಡೆದುಕೊಂಡು ಮಿಂಚು ಉಂಟಮಾಡಬಲ್ಲ ಗಟ್ಟಿಯಾದ ಮಿಂಚುಟ್ಟುಕಗಳನ್ನು (electric generators) ತಯಾರಿಸುವುದು ಇಂದು ದೊಡ್ಡ ತೊಡಕಾಗಿದೆ. ಹಾಗಾಗಿ ಕಡಲ ತೆರೆಯ ಕರೆಂಟ್ ಸಲಕರಣೆಗಳು ಇನ್ನೂ ಹೆಚ್ಚಾಗಿ ಬಳಕೆಯಾಗುತ್ತಿಲ್ಲ.

ಈ ನಿಟ್ಟಿನಲ್ಲಿ ಅಮೇರಿಕಾದ ’ಕಡಲ ಕಸುವು ಮರುಬಳಕೆಯ ಕೂಟವು’ (ORPC) ಹಲವಾರು ಹೊಸ ಅರಕೆಯ ಕೆಲಸಗಳನ್ನು ನಡೆಸುತ್ತಿದ್ದು, ಇತ್ತೀಚಿಗೆ ಕಡಲೊಳಗೆ 150 ಅಡಿ ಆಳದಲ್ಲಿ ಹೊಸದೊಂದು ಮಿಂಚುಟ್ಟುಕವನ್ನು ಅಣಿಗೊಳಿಸಿದೆ. 98 ಅಡಿ ಅಗಲ ಮತ್ತು 31 ಅಡಿ ಎತ್ತರ ಇರುವ ಅಡಿಪಾಯದ ಮೇಲೆ ಅಲೆಗಳಿಂದ ತಿರುಗುವ ಮಿಂಚುಟ್ಟುಕವನ್ನು ಅಳವಡಿಸಲಾಗಿದೆ.

ಮೊದಲ ಹಂತದಲ್ಲಿ ಕಡಲ ಅಲೆಗಳಿಂದ 150 ಕಿಲೋ ವ್ಯಾಟ್ ಕರೆಂಟಿನ ಕಸುವನ್ನು ಉಂಟುಮಾಡಬಲ್ಲ ಈ ಮಿಂಚುಟ್ಟುಕವು ಮುಂದಿನ ಕೆಲವು ವರುಶಗಳಲ್ಲಿ 5 ಮೆಗಾ ವ್ಯಾಟ್ ಕಸುವನ್ನು ಉಂಟು ಮಾಡುವಶ್ಟು ದೊಡ್ಡದಾಗಿಸಲು ಅಮೇರಿಕಾದ ಕೂಟವು ಗುರಿ ಇಟ್ಟುಕೊಂಡಿದೆ.

ಕರ‍್ನಾಟಕ ಸೇರಿದಂತೆ ಬಾರತದ ಹಲವು ನಾಡುಗಳಲ್ಲಿ ಕಡಲ ತೆರೆಯ ಕಸುವು ಹೇರಳವಾಗಿ ದೊರೆಯುವಂತದು. ಅಮೇರಿಕಾದಂತೆ ಈ ಕಸುವನ್ನು ನಾವು ಕೂಡ ಸರಿಯಾಗಿ ಬಳಸಿಕೊಳ್ಳಬೇಕಾಗಿದೆ.

(ಸುದ್ದಿಸೆಲೆ: popsci)

ನಿಮಗೆ ಹಿಡಿಸಬಹುದಾದ ಬರಹಗಳು

ಅನಿಸಿಕೆ ಬರೆಯಿರಿ: