ಹಸಿರುಮನೆಯ ಗುಟ್ಟು
– ರತೀಶ ರತ್ನಾಕರ.
ಸಣ್ಣ ಸಣ್ಣ ಗಿಡಗಳನ್ನು ಬೆಳಸಲು ಇಲ್ಲವೇ ಹೆಚ್ಚಾಗಿ ಹೂವಿನ ಗಿಡಗಳನ್ನು ಬೆಳಸಲು ಹಸಿರು ಬಣ್ಣದ ಇಲ್ಲವೇ ಬಣ್ಣವಿಲ್ಲದ ಗಾಜು ಇಲ್ಲವೇ ಪ್ಲಾಸ್ಟಿಕ್ ಹೊದ್ದಿರುವ ‘ಹಸಿರು ಮನೆಗಳನ್ನು’ ಎಲ್ಲಾದರೂ ಕಂಡಿರುತ್ತೇವೆ. ಗಿಡಗಳ ಬೆಳವಣಿಗೆಗೆ ಈ ಬಗೆಯ ಬೆಳಸುವಿಕೆ ನೆರವಾಗುತ್ತದೆ ಎಂದು ಅಲ್ಲಲ್ಲಿ ಕೇಳಿರುತ್ತೇವೆ. ಹಾಗದರೆ ಈ ಹಸಿರು ಮನೆಗಳು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತವೆ? ಇದರ ಕೆಲಸವೇನು ಎಂಬುದನ್ನು ಅರಿಯೋಣ ಬನ್ನಿ.
ಹಸಿರುಮನೆಯ ಹಿಂದಿರುವ ಅರಿಮೆ:
ನೇಸರನಿಂದ ನೆಲಕ್ಕೆ ಬೀಳುವ ಬೆಳಕಿನಿಂದಾಗಿ ನೆಲದಲ್ಲಿರುವ ಮಣ್ಣು, ನೀರು ಹಾಗು ಇತರೆ ವಸ್ತುಗಳು ಬಿಸಿಯಾಗುತ್ತವೆ. ಅಂದರೆ ನೇಸರನ ಬೆಳಕಿನ ಹುರುಪನ್ನು ಹೀರಿಕೊಂಡು ಅದೇ ಹುರುಪನ್ನು ಬಿಸಿಯ ರೂಪದಲ್ಲಿ ಹೊರಬಿಡುತ್ತವೆ ಹೀಗೆ ಹೊರಸೂಸುವ ಬಿಸಿಯು ತಿಳಿಗೆಂಪು ಕದಿರಾಗಿರುತ್ತದೆ (infrared rays). ನೇಸರನ ಬೆಳಕಿನ ಅಲೆಯಗಲ (wavelength) ಮತ್ತು ಮಣ್ಣು/ನೀರು ಹೊರಬಿಡುವ ತಿಳಿಗೆಂಪು ಕದಿರಿನ (infrared rays) ಅಲೆಯಗಲ ಬೇರೆ ಬೇರೆಯಾಗಿರುತ್ತದೆ. ಈ ಅಲೆಯಗಲದ ಆದಾರದ ಮೇಲೆ ಈ ಕಿರಣಗಳು ಕೆಲವು ವಸ್ತುಗಳ ಮೂಲಕ ಹಾದುಹೋಗಲಾರವು. ಎತ್ತುಗೆಗೆ, ನೇಸರನ ಬೆಳಕು ಗೋಡೆಗಳ ಮೂಲಕ ಹಾದುಹೋಗಲಾಗದು ಆದರೆ ರೇಡಿಯೋ ಅಲೆಗಳು ಗೋಡೆಗಳಮೂಲಕ ಹಾದುಹೋಗವುವು ಅದಕ್ಕೆ ಕಾರಣ ಅವುಗಳ ಅಲೆಯಗಲವೂ ಒಂದು. ಹೀಗೆ ನೇಸರನ ಬೆಳಕು ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗುವುದು ಆದರೆ ತಿಳಿಗೆಂಪು ಕದಿರು ತಮ್ಮ ಅಲೆಯಗಲದಿಂದಾಗಿ ಗಾಜು/ಪ್ಲಾಸ್ಟಿಕ್ ಮೂಲಕ ಹಾದುಹೋಗಲಾರವು.
ಒಂದು ಹಸಿರುಮನೆಯು ಕಾಲಿ ಕೋಣೆಯಂತಿದ್ದು ಅದರ ಗೋಡೆ ಹಾಗು ಮಾಡನ್ನು ಗಾಜು ಇಲ್ಲವೇ ಪ್ಲಾಸ್ಟಿಕ್ ನಿಂದ ಕಟ್ಟಿರುತ್ತಾರೆ. ಈ ಗಾಜು/ಪ್ಲಾಸ್ಟಿಕ್ ನಿಂದ ನೇಸರನ ಬೆಳಕು ಹರಿದು ಹಸಿರುಮನೆಯ ಒಳಗೆ ಬರುತ್ತದೆ. ಹೀಗೆ ಒಳಗೆ ಬಂದ ನೇಸರನ ಬೆಳಕು ಮಣ್ಣಿನ ಮೇಲ್ಬಾಗ ಇಲ್ಲವೇ ಗಿಡಗಳಲ್ಲಿರುವ ತೇವವನ್ನು (humidity) ಆರಿಸುತ್ತದೆ ಮತ್ತು ಬಿಸಿಯನ್ನು ಅಂದರೆ ತಿಳಿಗೆಂಪು ಕದಿರನ್ನು (infrared rays) ಹೊರಹಾಕತೊಡಗುತ್ತವೆ.
ಹಸಿರುಮನೆಯ ಒಳಗಿರುವ ಮಣ್ಣು ನೇಸರನ ಬೆಳಕು ಬಿದ್ದೊಡನೆ ಬಿಸಿಯಾಗಿ ಆ ಬಿಸಿಯನ್ನು ಮಣ್ಣಿನ ಮೇಲ್ಬಾಗದಲ್ಲಿರುವ ಗಾಳಿಗೆ ಸಾಗಿಸುತ್ತದೆ. ಇದರಿಂದ ಮಣ್ಣಿನ ಮೇಲ್ಬಾಗದ ಗಾಳಿ ಮೊದಲು ಬಿಸಿಯಾಗತೊಡಗುತ್ತದೆ. ಹೀಗೆ ಬಿಸಿಯಾದ ಗಾಳಿಯ ತಿಣ್ಮೆ (Density) ಕಡಿಮೆಯಿರುವುದರಿಂದ ಇದು ಹರಡಿಕೊಂಡು ನೆಲದಿಂದ ಮೇಲೇರುವುದು ಅದರ ಗುಣ ಹಾಗಾಗಿ ಬಿಸಿಗಾಳಿಯು ಹರಡಿಕೊಂಡು ಮೇಲೇರುತ್ತದೆ. ಹಸಿರುಮನೆಯ ಚಾವಣಿಯ ಹತ್ತಿರದ ತಂಪನೆಯಗಾಳಿಯು ಬಿಸಿಗಾಳಿಗಿಂತ ಹೆಚ್ಚು ತಿಣ್ಮೆ ಹೊಂದಿರುವುದರಿಂದ ಇದು ಕೆಳಬಾಗಕ್ಕೆ ಬರುತ್ತದೆ. ಈ ತಂಪುಗಾಳಿಯು ಮಣ್ಣಿನಿಂದ ಹೊರಬರುತ್ತಿರುವ ಬಿಸಿಯನ್ನು ಹೀರಿಕೊಂಡು ಬಿಸಿಗಾಳಿಯಾಗಿ ಮತ್ತೆ ಮೇಲೇರತೊಡಗುತ್ತದೆ. ಹೀಗೆ ಮಣ್ಣಿನ ಮೇಲ್ಬಾಗದ ಕಡೆಯಿಂದ ಹಸಿರುಮನೆಯ ಚಾವಣಿಯ ಕಡೆಗೆ ಗಾಳಿಯು ಬಿಸಿಯಾಗತೊಡಗುತ್ತದೆ.
ಹಸಿರುಮನೆಗೆ ಬಳಸುವ ಗಾಜು/ಪ್ಲಾಸ್ಟಿಕ್ನ ಗುಣವೆಂದರೆ ಅದು ನೇಸರನ ಬೆಳಕನ್ನು ತನ್ನ ಮೂಲಕ ಹರಿಯಲು ಬಿಡುತ್ತದೆ ಆದರೆ ಹೆಚ್ಚು ಅಲೆಯಗಲ ಹೊಂದಿರುವ ಕಿರಣಗಳನ್ನು ಅಂದರೆ infrared rays ನ್ನು ತನ್ನ ಮೂಲಕ ಹರಿಯಲು ಬಿಡುವುದಿಲ್ಲ ಎಂದು ಮೊದಲೇ ತಿಳಿದಿದ್ದೇವೆ. ಹೀಗಾಗಿ ಮಣ್ಣಿನಿಂದ ಹೊರಬಂದ ಬಿಸಿಯು ಹಸಿರುಮನೆಯ ಗಾಳಿಗೆ ಸೇರಿ ಗಾಜು/ಪ್ಲಾಸ್ಟಿಕ್ ಮೂಲಕ ಹೊರಹೋಗಲಾಗದೆ ಇರುತ್ತದೆ. ಇದರಿಂದ ಹಸಿರುಮನೆಯ ಒಳಗಿನ ಗಾಳಿಯು ಬಿಸಿಯಾಗಿ, ಹಸಿರುಮನೆ ಹೊರಗಿನ ಗಾಳಿಯ ಬಿಸುಪಿಗಿಂತ (temperature) ಹೆಚ್ಚಿನ ಬಿಸುಪನ್ನು ಹೊಂದಿರುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಹಸಿರುಮನೆಯ ಒಳಗೆ ಯಾವಾಗಲೂ ಹೊರಗಿನ ಗಾಳಿಪಾಡಿಗಿಂತ ಹೆಚ್ಚಿನ ಬಿಸುಪು ಇರುತ್ತದೆ. ಈ ಹೆಚ್ಚಿನ ಬಿಸುಪು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ಮುಂದೆ ನೋಡೋಣ.
ಹಗಲಿನ ಹೊತ್ತು ನೇಸರನ ಬೆಳಕಿನಿಂದ ಹಸಿರುಮನೆಯ ಒಳಗೆ ಹೆಚ್ಚಿನ ಬಿಸುಪು ಇದ್ದರೆ ಇನ್ನೂ ಇರುಳಿನ ಹೊತ್ತಿನಲ್ಲಿ ಇಲ್ಲಿ ಬೆಚ್ಚಗಿನ ಗಾಳಿ ಇರುತ್ತದೆ. ಇದಕ್ಕೆ ಕಾರಣ, ಹಗಲೆಲ್ಲಾ ನೇಸರನ ಬೆಳಕಿನಿಂದ ಬಿಸಿಯಾದ ಹಸಿರು ಮನೆಯೊಳಗಿನ ಮಣ್ಣು ತನ್ನಲ್ಲಿರುವ ಬಿಸುಪನ್ನು ರಾತ್ರಿಯ ಹೊತ್ತು ಹೊರಗಾಳಿಗೆ ಬಿಡಲಾರಂಬಿಸುತ್ತದೆ. ಹಾಗು ಈ ಬಿಸಿಯನ್ನು ಗಾಜು/ಪ್ಲಾಸ್ಟಿಕ್ಕಿನ ಗೊಡೆಯ ನೆರವಿನಿಂದ ಹಸಿರುಮನೆಯ ಒಳಗೇ ಹಿಡಿದಿಡಿಲಾಗುತ್ತದೆ. ಹಾಗಾಗಿ ಹಸಿರು ಮನೆಯ ಒಳಗಿನ ಬಿಸುಪು ಹೊರಗಿನ ಗಾಳಿಯ ಬಿಸುಪಿಗಿಂತ ಹೆಚ್ಚಿರುತ್ತದೆ ಮತ್ತು ಇದು ಗಿಡಗಳ ಸುತ್ತಲಿನ ಗಾಳಿಯನ್ನು ಕೂಡಲೇ ತಂಪಾಗುವುದನ್ನು ತಡೆಯುತ್ತದೆ.
ಗಿಡಗಳ ಬೆಳವಣಿಗೆಗೆ ಹಸಿರುಮನೆ ಹೇಗೆ ನೆರವಾಗುತ್ತದೆ?
ನೇಸರನ ಬೆಳಕನ್ನು ಹಸಿರುಮನೆಯ ಒಳಗೆ ಹಾಯಿಸಿ ಅದರಿಂದ ಬಿಸಿಯಾದ ಮಣ್ಣು/ಗಿಡ/ನೀರಿನಿಂದ ಹೊರಬರುವ ತಿಳಿಗೆಂಪು ಕದಿರನ್ನು (infrared rays) ಹಿಡಿದಿಟ್ಟುಕೊಳ್ಳುವುದರಿಂದ ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತದೆ ಎಂಬುದನ್ನು ನೋಡೋಣ.
1. ಹೆಚ್ಚಿನ ಬಿಸುಪು ಗಿಡದ ಬೆಳವಣಿಗೆಗೆ ಉಪಕಾರಿ:
ಪ್ರತಿಯೊಂದು ಮರಗಿಡಗಳು ಸೂಲುಗೂಡುಗಳಿಂದ (cell) ಆಗಿರುತ್ತದೆ. ಈ ಸೂಲುಗೂಡುಗಳಲ್ಲಿ ದಿನಕ್ಕೆ ನೂರಾರು ಬಗೆಯ ರಾಸಾಯನಿಕ ಎಸಕಗಳು (chemical reaction) ನಡೆಯುತ್ತಿರುತ್ತವೆ, ಇವು ಸೂಲುಗೂಡುಗಳ ಬೆಳವಣಿಗೆಗೆ ನೆರವಾಗುತ್ತವೆ. ಹೀಗೆ ನಡೆಯುವ ರಾಸಾಯನಿಕ ಎಸಕಗಳಿಗೆ ದೊಳೆಗಳು (enzymes) ನೆರವನ್ನು ನೀಡುತ್ತವೆ. ಈ ದೊಳೆಗಳು ರಾಸಾಯನಿಕ ಎಸಕಕ್ಕೆ ಬಿರುಗೆ (catalyst)ಯಂತೆ ಕೆಲಸ ಮಾಡುತ್ತವೆ. ಗಿಡದ ಸೂಲುಗೂಡುಗಳ ರಾಸಾಯನಿಕ ಎಸಕದಲ್ಲಿ ‘ಬೆಳಕಿನ ಒಂದುಗೆ'(photosynthesis) ಕೂಡ ಒಂದು. ಹೀಗೆ ಬೆಳಕಿನ ಒಂದುಗೆಗೆ ನೆರವಾಗುವ ದೊಳೆಗಳು ಕೆಲವು ಹುಳಿಯಳತೆ (pH) ಮತ್ತು ಬಿಸುಪಿನಲ್ಲಿ ಚೆನ್ನಾಗಿ ಕೆಲಸಮಾಡುತ್ತವೆ. ಅತಿ ಕಡಿಮೆ ಹುಳಿಯಳತೆ ಮತ್ತು ಕಡಿಮೆ ಬಿಸುಪು ಇದ್ದರೆ ಈ ದೊಳೆಗಳ ಕೆಲಸ ಕುಂದುತ್ತದೆ. ಹಾಗೆಯೇ ಅತಿ ಹೆಚ್ಚು ಹುಳಿಯಳತೆ ಮತ್ತು ಬಿಸುಪು ಇದ್ದರೂ ಈ ದೊಳೆಗಳು ತಮ್ಮ ಕೆಲಸಮಾಡಲಾರವು ಮತ್ತು ಸಾಯುಲೂ ಬಹುದು. ಹಾಗಾಗಿ, ಈ ದೊಳೆಗಳು ಚೆನ್ನಾಗಿ ತಮ್ಮ ಬಿರುಗೆಯ ಕೆಲಸವನ್ನು ಚೆನ್ನಾಗಿ ಮಾಡಲು ಒಂದು ಒಳ್ಳೆಯ ಬಿಸುಪು ಇರಬೇಕಾಗುತ್ತದೆ. ದೊಳೆಗಳ ಬಗೆಯ ಆದರಾದ ಮೇಲೆ ಅವು ಹೆಚ್ಚು ಕೆಲಸ ಮಾಡುವ ಬಿಸುಪು ಬೇರೆ ಬೇರೆಯಾಗಿರುತ್ತದೆ.
ಹಸಿರುಮನೆಯ ಒಳಗೆ ಹೊರಗಿನ ಗಾಳಿಗಿಂತ ಹೆಚ್ಚಿನ ಬಿಸುಪು ಇರುವುದರಿಂದ ಗಿಡದ ಸೂಲುಗೂಡುಗಳ ದೊಳೆಗಳು ಈ ಬಿಸುಪಿನಲ್ಲಿ ತಮ್ಮ ಕೆಲಸವನ್ನು ಚೆನ್ನಾಗಿ ನಡೆಸಿ ಬೆಳಕಿನ ಒಂದುಗೆಯನ್ನು ನಡೆಸುತ್ತಿರುತ್ತವೆ. ಗಿಡಗಳಿಗೆ ಬೇಕಾದ ಬಿಸುಪನ್ನು ಮೊದಲೇ ತಿಳಿದುಕೊಂಡು ಆ ಬಿಸುಪನ್ನು ಹಸಿರುಮನೆಯ ಒಳಗೆ ಕಾದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನೇಸರನ ಬೆಳಕು ಹೆಚ್ಚಾಗಿ ಹಸಿರುಮನೆಯ ಒಳಗಿನ ಬಿಸುಪು ಬೇಕಾದ ಬಿಸುಪಿಗಿಂತ ಹೆಚ್ಚಾದರೆ ಗಾಳಿಕಿಂಡಿಗಳ (Ventilator) ಮೂಲಕ ಬಿಸಿಗಾಳಿಯನ್ನು ಹೊರಹಾಕಿ ಹೊರಗಿನ ತಂಪುಗಾಳಿಯನ್ನು ಹಸಿರುಮನೆಯ ಒಳಗೆ ಬರುವಂತೆ ಏರ್ಪಾಡು ಮಾಡಬೇಕಾಗುತ್ತದೆ. ಅದಕ್ಕಾಗಿ ಹಸಿರುಮನೆಯಲ್ಲಿ ಗಾಳಿಕಿಂಡಿಗಳನ್ನು ಇಟ್ಟಿರಬೇಕಾಗುತ್ತದೆ. ಹಸಿರುಮನೆಯ ಕಿಟಕಿ ಬಾಗಿಲುಗಳು ಕೂಡ ಗಾಳಿಕಿಂಡಿಗಳಾಗಿ ಕೆಲಸ ಮಾಡುತ್ತವೆ. ಹೀಗೆ ಹಗಲೆಲ್ಲಾ ಬಿಸುಪಿನಲ್ಲಿ ಹೆಚ್ಚಿನ ಏರುಪೇರಾಗದೇ, ಬೇಕಾದ ಬಿಸುಪನ್ನು ಕಾಯ್ದುಕೊಳ್ಳುವುದರಿಂದ ಗಿಡದ ದೊಳೆಗಳು ನೇಸರನ ಬೆಳಕು ಸಿಗುವವರೆಗೂ ಚೆನ್ನಾಗಿ ಕೆಲಸಮಾಡಿ ಬೆಳಕಿನ ಒಂದುಗೆಯನ್ನು ನಡೆಸುತ್ತವೆ. ಇದರಿಂದ ಹಸಿರು ಮನೆಯ ಒಳಗೆ ಗಿಡಗಳು ಬೇಗನೇ ಮತ್ತು ಚೆನ್ನಾಗಿ ಬೆಳೆಯುತ್ತವೆ.
2. ಹೆಚ್ಚಿನ ತೇವ (humidity) ಗಿಡದ ಬೆಳವಣಿಗೆಗೆ ಉಪಕಾರಿ:
ನೇಸರನ ಬೆಳಕಿದ್ದಾಗ ಬೆಳಕಿನ ಒಂದುಗೆಯನ್ನು ಗಿಡಗಳು ನಡೆಸುತ್ತವೆ ಎಂದು ನಾವು ಮೊದಲೇ ತಿಳಿದಿದ್ದೇವೆ. ಈ ಬೆಳಕಿನ ಒಂದುಗೆಗೆ ನೀರನ್ನೂ ಕೂಡ ಗಿಡಗಳು ಬಳಸುತ್ತವೆ. ಹಾಗಾಗಿ ಹಸಿರುಮನೆಯ ಒಳಗೆ ಸಾಕಶ್ಟು ನೀರಿನ ಏರ್ಪಾಡು ಗಿಡಗಳಿಗೆ ಬೇಕಾಗುತ್ತದೆ. ಮಣ್ಣಿನಿಂದ ಆವಿಯಾದ ನೀರಿನ ತೇವ ಮತ್ತು ಗಿಡಗಳ ಬೆಳಕಿನ ಒಂದುಗೆಯಿಂದ ಹೊರಬಂದ ತೇವ ಹಸಿರುಮನೆಯ ಒಳಗೆಯೇ ಇರುತ್ತದೆ, ಗಾಜು/ಪ್ಲಾಸ್ಟಿಕ್ ಗೋಡೆಗಳನ್ನು ದಾಟಿ ತೇವಾಂಶವು ಹೊರಹೋಗಲಾಗದು. ಇದರಿಂದ ಮಣ್ಣಿನಲ್ಲಿರುವ ನೀರು ಬೇಗನೆ ಆವಿಯಾಗುವುದನ್ನು ತಪ್ಪಿಸಬಹುದು ಮತ್ತು ಈ ನೀರನ್ನು ಗಿಡಗಳ ಬೆಳಕಿನ ಒಂದುಗೆಗೆ ಒದಗಿಸುತ್ತಿರ ಬಹುದು. ಒಂದು ವೇಳೆ, ಹಸಿರು ಮನೆಯ ಒಳಗೆ ತೇವಾಂಶವು ಅಗತ್ಯಕ್ಕಿಂತ ಹೆಚ್ಚಾದರೆ ಗಿಡಗಳಿಗೆ ಬೆಳಕಿನ ಒಂದುಗೆಯಿಂದ ತೇವಾಂಶವನ್ನು ಹೊರಹಾಕಲು ತೊಡಕಾಗುತ್ತದೆ. ಇದು ಬೆಳಕಿನ ಒಂದುಗೆ ಮತ್ತು ಆದ್ದರಿಂದ ಗಿಡದ ಬೆಳವಣಿಗೆಗೆ ತೊಂದರೆ ಕೊಡುತ್ತದೆ. ಹಾಗಾಗಿ ತೇವಾಂಶವನ್ನು ಬೇಕಾದಶ್ಟು ಮಾತ್ರ ಕಾಯ್ದುಕೊಳ್ಳಲು ಮತ್ತೊಮ್ಮೆ ಗಾಳಿಕಿಂಡಿಗಳ ನೆರವನ್ನು ಪಡೆಯಬಹುದು. ಒಳಗಿರುವ ತೇವದ ಗಾಳಿ ಹೊರಹೋಗಿ ಹೊರಗಿನ ಗಾಳಿ ಒಳಬರುವಂತೆ ಗಾಳಿಕಿಂಡಿಗಳನ್ನು ಹಸಿರುಮನೆಗಳಲ್ಲಿ ಅಳವಡಿಸಲಾಗಿರುತ್ತದೆ.
3. ಹೊರಗಿನ ಕ್ರಿಮಿಕೀಟಗಳಿಂದ ಕಾಯುವುದು.
ಹಸಿರುಮನೆಯು ಗಾಜು/ಪ್ಲಾಸ್ಟಿಕ್ ನ ಗೋಡೆಗಳಿಂದ ಕಟ್ಟಿರುವುದರಿಂದ ಗಿಡಗಳ ಬೆಳವಣಿಗೆಗೆ ತೊಂದರೆ ಕೊಡುವ ಹೊರಗಿನ ಕ್ರಿಮಿಕೀಟಗಳಿಂದ ದೂರವಿಡಬಹುದಾಗಿದೆ.
4. ಕೆಟ್ಟ ಗಾಳಿಪಾಡಿನಿಂದ ಕಾಯುವುದು.
ಹಸಿರುಮನೆಯ ಗಿಡಗಳನ್ನು ಅತಿ ಹೆಚ್ಚಿನ ಮಳೆ, ಗಾಳಿ ಮತ್ತು ಬಿಸಿಲಿನಿಂದ ಆಗುವ ತೊಂದರೆಗಳಿಂದ ಕಾಪಾಡಬಹುದು. ಅಲ್ಲದೇ ಇರುಳಿನ ಹೆಚ್ಚು ಹೊತ್ತು ಹಸಿರುಮನೆಯ ಒಳಗೆ ಬೆಚ್ಚಗಿನ ಗಾಳಿ ಇರುವುದರಿಂದ ತಂಪುಗಾಳಿಯಿಂದ ಗಿಡಗಳಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು. ಕೆಲವು ಕಡೆ ಹಸಿರುಮನೆಗಳಿಗೆ ಹಸಿರುಬಣ್ಣದ ಗಾಜು/ಪ್ಲಾಸ್ಟಿಕ್ ಅನ್ನು ಬಳಸಿರುತ್ತಾರೆ, ಇದು ನೇಸರನ ಬಿಸಿಲು ಅಗತ್ಯಕ್ಕಿಂತ ಹೆಚ್ಚಾಗಿ ಹಸಿರುಮನೆಯ ಒಳಗೆ ಬರದಂತೆ ತಡೆಯುತ್ತದೆ.
ಹೀಗೆ, ಹಸಿರುಮನೆಯನ್ನು ಬಳಸಿ ಗಿಡಗಳನ್ನು ಬೆಳಸುವುದರಿಂದ ಗಿಡಗಳಿಗೆ ಬೇಕಾದ ಬಿಸುಪು ಮತ್ತು ತೇವಾಂಶ ದಿನದ ಹೆಚ್ಚುಕಾಲ ಸಿಗುತ್ತಿರುತ್ತದೆ. ಇದರಿಂದ ಗಿಡಗಳು ತಮ್ಮ ಬೆಳಕಿನ ಒಂದುಗೆಯನ್ನ್ಯು ನಡೆಸಿ ಆದಶ್ಟು ಬೇಗ ಮತ್ತು ಚೆನ್ನಾಗಿ ಬೆಳೆಯುತ್ತವೆ. ಹಸಿರುಮನೆಯ ಬಿಸುಪು ಹಾಗು ತೇವಾಂಶವನ್ನು ನಮಗೆ ಬೇಕಾದ ಬಗೆಯಲ್ಲಿ ಹಿಡಿದಿಟ್ಟುಕೊಳ್ಳಬಹುದಾಗಿದೆ. ಇದು ಹೆಚ್ಚು ಇಳುವರಿ ತರುವಲ್ಲಿ ನೆರವಾಗುತ್ತದೆ.
(ಮಾಹಿತಿ ಸೆಲೆ: alaska.edu, 420magazine)
(ಚಿತ್ರ ಸೆಲೆ: wikipedia)
1 Response
[…] ಮನೆಯು ಹೇಗೆ ನೆರವಾಗುತ್ತದೆ ಎಂದು ‘ಹಸಿರುಮನೆಯ ಗುಟ್ಟು‘ ಬರಹದಲ್ಲಿ […]