ಬಾನೋಡದ ಪಟ್ಟಿಗಳು
ಕಳೆದ ಬರಹವೊಂದರಲ್ಲಿ ಬಾನೋಡ (airplane) ಹಾರಾಟದ ಅರಿಮೆಯ ಹಿನ್ನೆಲೆಯನ್ನು ತಿಳಿದುಕೊಂಡಿದ್ದೆವು. ರೆಕ್ಕೆಗಳ ಆಕಾರದ ನೆರವಿನೊಂದಿಗೆ ಹಾರಾಟಕ್ಕೆ ತಡೆಯೊಡ್ಡುವ ಗಾಳಿ ಎಳೆತ ಮತ್ತು ನೆಲಸೆಳೆತವನ್ನು ಮೀರಿಸಿ ನೂಕುವಿಕೆ ಮತ್ತು ಎತ್ತುವಿಕೆಯು ಬಾನೋಡವೊಂದು ಹಾರಲು ಅಡಿಪಾಯವಾಗಿರುವುದನ್ನು ಕಂಡುಕೊಂಡಿದ್ದೆವು.
ಬಾನೋಡವು ಬಾನಿಗೆ ಏರುವುದು ಎಶ್ಟು ಮುಕ್ಯವೋ ಅಶ್ಟೇ ಮುಕ್ಯ ಹಾರಿದ ಬಾನೋಡವನ್ನು ಹಿಡಿತದಲ್ಲಿಡುವುದು. ಬಾನೋಡವು ಸರಿಯಾದ ಎತ್ತರದಲ್ಲಿ ಹಾರುವಂತಾಗಲು ಅದರ ಏರಿಳಿತವನ್ನು ಮತ್ತು ಸರಿಯಾದ ದಾರಿಯಲ್ಲಿ ಸಾಗಲು ಅದರ ದಿಕ್ಕನ್ನು ಹಿಡಿತದಲ್ಲಿಡಬೇಕಾಗುತ್ತದೆ. ಈ ಕೆಲಸವನ್ನು ಮಾಡಲು ಬಾನೋಡದ ರೆಕ್ಕೆಗಳ ಮೇಲೆ ಹಲವು ಬಗೆಯ ಪಟ್ಟಿಗಳನ್ನು ಅಳವಡಿಸಲಾಗಿರುತ್ತದೆ. ಆ ಪಟ್ಟಿಗಳ ಕುರಿತು ಈ ಬರಹದಲ್ಲಿ ತಿಳಿದುಕೊಳ್ಳೋಣ.
ಬಾನೋಡವು ಮುಕ್ಯವಾಗಿ ಮೂರು ಬಗೆಯ ಸಾಗಾಟವನ್ನು ಕಯ್ಗೊಳ್ಳಬೇಕಾಗುತ್ತದೆ. ಇವುಗಳನ್ನು ಕೆಳಗಿನ ತಿಟ್ಟದಲ್ಲಿ ತೋರಿಸಲಾಗಿದೆ.
1) ಏರಿಳಿಕೆ (pitch): ಹಾರಾಟದ ಎತ್ತರವನ್ನು ಹಿಡಿತದಲ್ಲಿಡಲು ಬಾನೋಡವು ಮೇಲೆ ಇಲ್ಲವೇ ಕೆಳಗೆ ಸಾಗಬೇಕಾಗುತ್ತದೆ. ಇದಕ್ಕಾಗಿ ಬಾನೋಡವು ತನ್ನ ಮಯ್ಯಿಗೆ ಸಮಾನವಾದ ನಡುಗೆರೆಯಲ್ಲಿ ತನ್ನ ಮುಂದಿನ ಮತ್ತು ಹಿಂದಿನ ಬಾಗವನ್ನು ಬಾಗಿಸಬೇಕಾಗುತ್ತದೆ. ಈ ಬಗೆಯ ಸಾಗಾಟವನ್ನು ’ಏರಿಳಿ’ ಇಲ್ಲವೇ ’ಬಾಗು’ ಅಂತಾ ಕರೆಯಬಹುದು.
2) ಹೊರಳುವಿಕೆ (yaw): ಬಾನೋಡವು ಎಡಕ್ಕೆ ಇಲ್ಲವೇ ಬಲಕ್ಕೆ ಹೊರಳುವ ಸಾಗಾಟವನ್ನು ಇದು ಸೂಚಿಸುತ್ತದೆ. ಇದಕ್ಕಾಗಿ ಬಾನೋಡವು ತಮ್ಮ ಮಯ್ಯಿಗೆ ನೇರವಾದ ನಡುಗೆರೆಯಲ್ಲಿ ಹೊರಳಬೇಕಾಗುತ್ತದೆ.
3) ಉರುಳುವಿಕೆ (roll): ಬಾನೋಡದ ದಿಕ್ಕು ಮತ್ತು ಎತ್ತರವನ್ನು ಈ ಸಾಗಾಟದಿಂದ ಬದಲಾಯಿಸಬಹುದು.
ರೆಕ್ಕೆಯ ಮೇಲಿರುವ ಪಟ್ಟಿಗಳನ್ನು ಹೊರಳಿಸುವ ಮೂಲಕ ಮೇಲಿನ ಮೂರು ಬಗೆಯ ಸಾಗಾಟವನ್ನು ಬಾನೋಡ ಹಾರಿಸುಗ (pilot) ಹಿಡಿತದಲ್ಲಿಡುತ್ತಾರೆ. ಆ ರೆಕ್ಕೆಯ ಪಟ್ಟಿಗಳಾವವು ಅಂತಾ ಈಗ ಅರಿಯೋಣ.
1) ಉರುಳುಪಟ್ಟಿ (Aileron): ಬಾನೋಡದ ದಿಕ್ಕು ಮತ್ತು ತುಸು ಎತ್ತರವನ್ನು ಬದಲಾಯಿಸಬಲ್ಲ ’ಉರುಳುವಿಕೆ’ಗಾಗಿ ಮುಂದಿನ ರೆಕ್ಕೆಯ ಮೇಲೆ ’ಉರುಳುಪಟ್ಟಿ’ಗಳನ್ನು ಅಳವಡಿಸಲಾಗಿರುತ್ತದೆ. ಮುಂದಿನ ರೆಕ್ಕೆಯ ಎಡ ಮತ್ತು ಬಲಬಾಗದಲ್ಲಿರುವ ಈ ಪಟ್ಟಿಗಳು ಒಂದಕ್ಕೊಂದು ಎದುರುಬದುರಾಗಿ ಕೆಲಸ ಮಾಡುತ್ತವೆ. ಅಂದರೆ ಎಡ ಉರುಳುಪಟ್ಟಿ ಮೇಲೆದ್ದರೆ, ಬಲಬಾಗದ ಪಟ್ಟಿ ಕೆಳಗಿಳಿಯುತ್ತದೆ. ಬಾನೋಡವು ಬಲಕ್ಕೆ ತಿರುಗಿ ತುಸು ಕೆಳಗಿಳಿಯಬೇಕಾದರೆ ಎಡ ಉರುಳುಪಟ್ಟಿಯನ್ನು ಕೆಳಕ್ಕೆ ಮತ್ತು ಬಲ ಉರುಳುಪಟ್ಟಿಯನ್ನು ಮೇಲಕ್ಕೆ ಹೊರಳಿಸಬೇಕಾಗುತ್ತದೆ. (ಕಿರುತಿಟ್ಟ-೧ ನೋಡಿ)
2) ಏರಿಳಿಪಟ್ಟಿ (Elevator) ಮತ್ತು ಬಡಿತಪಟ್ಟಿ (Flap): ಬಾನೋಡದ ಏರಿಳಿತವನ್ನು ಹಿಡಿತದಲ್ಲಿಡಲು, ಹಿಂದಿನ ರೆಕ್ಕೆಯಲ್ಲಿ ಮತ್ತು ಮುಂದಿನ ರೆಕ್ಕೆಯ ನಡುವಿನಲ್ಲಿ ಪಟ್ಟಿಗಳನ್ನು ಅಳವಡಿಸಲಾಗಿರುತ್ತದೆ. ಹಿಂದಿನ ರೆಕ್ಕೆಯಲ್ಲಿರುವ ಪಟ್ಟಿಗಳನ್ನು ಏರಿಳಿಪಟ್ಟಿ ಅಂತಾ ಕರೆದರೆ ಮುಂದಿರುವ ಪಟ್ಟಿಯನ್ನು ಬಡಿತಪಟ್ಟಿ ಅನ್ನಬಹುದು. ಬಾನೋಡವನ್ನು ಮೇಲೇರಿಸಬೇಕಾದರೆ ಹಿಂದಿನ ರೆಕ್ಕೆಯಲ್ಲಿರುವ ಏರಿಳಿಪಟ್ಟಿಗಳನ್ನು ಬಾನೋಡ ಹಾರಿಸುಗ ಮೇಲೆ ಎತ್ತುತ್ತಾರೆ. ಇದರಿಂದಾಗಿ ಗಾಳಿಯ ಒತ್ತಡ ಹಿಂದಿನ ಬಾಗದಲ್ಲಿ ಹೆಚ್ಚಾಗಿ ಬಾನೋಡದ ಬಾಲ ಕೆಳಗೆ ಬಾಗಿದರೆ, ಮುಂದಿನ ಮೂಗಿನ ಬಾಗ ಮೇಲೇರುತ್ತದೆ. (ಕಿರುತಿಟ್ಟ-೨, ೩ ನೋಡಿ)
3) ಹೊರಳುಪಟ್ಟಿ (Rudder): ಬಾನೋಡವು ಎಡಕ್ಕೆ ಇಲ್ಲವೇ ಬಲಕ್ಕೆ ತಿರುಗುವಂತೆ ಮಾಡಲು ಹಿಂದಿನ ರೆಕ್ಕೆಗೆ ನೇರವಾಗಿ ಪಟ್ಟಿಗಳನ್ನು ಅಳವಡಿಸಲಾಗಿರುತ್ತದೆ. ಈ ಪಟ್ಟಿಯನ್ನು ಹೊರಳುಪಟ್ಟಿ ಅನ್ನುತ್ತಾರೆ. ಬಾನೋಡವನ್ನು ಎಡಕ್ಕೆ ತಿರುಗಿಸಬೇಕಾದಾಗ ಹಾರಿಸುಗ ಹೊರಳುಪಟ್ಟಿಯನ್ನು ಎಡಕ್ಕೆ ಹೊರಳಿಸುತ್ತಾರೆ ಇದರಿಂದ ಬಾನೋಡದ ಬಾಲದ ಬಾಗವು ಬಲಕ್ಕೆ ಮತ್ತು ಮುಂದಿನ ಮೂಗಿನ ಬಾಗವು ಎಡಕ್ಕೆ ಹೊರಳುತ್ತದೆ. (ಕಿರುತಿಟ್ಟ-೪ ನೋಡಿ)
ಮೇಲೆ ತಿಳಿಸಿರುವ ಪಟ್ಟಿಗಳನ್ನು ಹಿಡಿತದಲ್ಲಿಡಲು ಅನುವಾಗುವಂತೆ ಎಲ್ಲ ಪಟ್ಟಿಗಳನ್ನು ಬೇರೆ-ಬೇರೆಯಾಗಿ ತಂತಿಗಳಿದ್ದ ಬೆಸೆಯಲಾಗಿರುತ್ತದೆ ಮತ್ತು ಈ ತಂತಿಗಳ ಹಿಡಿತವನ್ನು ಬಾನೋಡ ಹಾರಿಸುಗರ ಕಯ್ಯಲ್ಲಿರುವ ಸಲಕರಣೆಗೆ ಅಳವಡಿಸಲಾಗಿರುತ್ತದೆ. ಹೀಗೆ ರೆಕ್ಕೆಯ ಮೇಲೆ ಪಟ್ಟಿಗಳನ್ನು ಅಳವಡಿಸಿ ಬಾನೋಡದ ಹಾರಾಟವನ್ನು ಹಿಡಿತದಲ್ಲಿಡಲಾಗುತ್ತದೆ.
ರೆಕ್ಕೆ ಇದ್ದರೆ ಸಾಕೆ..? ಹಕ್ಕಿಗೆ ಬೇಕು ಏರಿಳಿ, ಉರುಳು, ಹೊರಳು ಪಟ್ಟಿಗಳು ಅನ್ನುತ್ತಾ ಚಿನ್ನಾರಿಮುತ್ತನ ಹಾಡು ಕೊಂಚ ಬದಲಾಯಿಸೋಣವೆ? 🙂
(ತಿಳಿವಿನ ಮತ್ತು ತಿಟ್ಟಸೆಲೆಗಳು: HowStuffWorks, Wikipedia, NASA)
ಇತ್ತೀಚಿನ ಅನಿಸಿಕೆಗಳು