ನೀರಿನ ಕೆಲವು ಸೋಜಿಗದ ಸಂಗತಿಗಳು
– ರಗುನಂದನ್.
ಕಳೆದೆರಡು ಬರಹಗಳಲ್ಲಿ ನೀರಿನ ಬಗ್ಗೆ ಸಾಕಶ್ಟು ವಿಶಯಗಳನ್ನು ತಿಳಿದುಕೊಂಡಿದ್ದೆವು. ನೀರಿನ ಅಣುಕೂಟಗಳ ಒಳ-ಹೊರಗನ್ನು ಅರಿತೆವು. ಅಂದರೆ ನೀರಿನ ಬಗ್ಗೆ ಎಲ್ಲಾ ತಿಳಿದುಕೊಂಡಂತಾಯಿತೇ ? ಈ ಬರಹದಲ್ಲಿ ನೀರಿನ ಬಗ್ಗೆ ಇನ್ನೂ ತಿಳಿಯದ ಕೆಲವು ಸೋಜಿಗಗಳನ್ನು ನೋಡೋಣ.
1. ಎಶ್ಟು ಬಗೆಯ ಮಂಜುಗಡ್ಡೆಗಳಿವೆ?
ನಿಮಗೆ ಅಚ್ಚರಿಯೆನಿಸಬಹುದು, ಈಗಿನವರೆಗೆ 17 ಬಗೆಯ ಮಂಜುಗಡ್ಡೆಗಳನ್ನು ಗುರುತಿಸಲಾಗಿದೆ. ಅವುಗಳ ಹರಳಿಟ್ಟಳದ (crystal structure) ನೆಲೆಯ ಮೇಲೆ ಈ 17 ಬಗೆಗಳನ್ನು ಗುರುತಿಸಲಾಗಿದೆ. ನಾವು ನೋಡುವುದು ಒಂದೇ ಬಗೆಯ ಮಂಜುಗಡ್ಡೆ. ಮತ್ತೊಂದು ಬಗೆಯು ಹೊರ ಗಾಳಿಪದರದಲ್ಲಿ ಇರುತ್ತದೆ. ಮಿಕ್ಕ 15 ಬಗೆಗಳು ಹೆಚ್ಚಿನ ಒತ್ತಡದಲ್ಲಿ ಮಾತ್ರವೇ ರೂಪವನ್ನು ತಾಳುತ್ತವೆ. ನೀರಿನಲ್ಲಿ ಹೈಡ್ರೋಜನ್ ಎಣೆಯು(hydrogen bond) ಆಕ್ಸಿಜನ್ ಒಟ್ಟಿಗೆ ನಾಲ್ಮೊಗಗಳ ನಿರುಗೆಯಾಗಿ(tetrahedral network) ಹೆಣೆದುಕೊಂಡಿರುತ್ತವೆ. ಇದರ ಮೇಲೆ ಒತ್ತಡವನ್ನು ಹಾಕಿದರೆ ಬಗೆ ಬಗೆಯ ನೀರು-ಮಂಜುಗಡ್ಡೆಗಳಾಗಿ ಮಾರ‍್ಪಾಟಾಗುತ್ತವೆ. ಆದರೆ ಹದಿನೇಳಕ್ಕಿಂತ ಹೆಚ್ಚಿಗೆ ಇವೆಯೇ ಎಂಬುದು ಗೊತ್ತಿಲ್ಲ.
2. ಎಶ್ಟು ಬಗೆಯ ನೀರುಗಳಿವೆ?
ನಿಮಗೆ ಈ ಕೇಳ್ವಿ ಬೆರಗೆನಿಸಬಹುದು. ನೀರು ಗಟ್ಟಿಯಾಗಿದ್ದರೆ ಮಂಜುಗಡ್ಡೆ ಎನ್ನುತ್ತೇವೆ. ನೀರು ಉಗಿಯಾದರೆ ಆವಿ ಎನ್ನುತ್ತೇವೆ. ನೀರು ಹರಿದರೆ ನೀರೇ ಎನ್ನುತ್ತೇವೆ. ಆದರೆ ಈ ಹರಿಯುವ ನೀರಿನಲ್ಲಿ ಎರಡು ಬಗೆಗಳಿದ್ದರೆ?
ಅರಿಗರ ಪ್ರಕಾರ ನೀರನ್ನು ಕಡುತಂಪಾಗಿಸಿದಾಗ(super-cooled) ಎರಡು ಬಗೆಯ ನೀರುಗಳು ಒಂದಕ್ಕೊಂದು ಮಾರ‍್ಪಾಟಾಗುವುದನ್ನು ಗಮನಿಸಬಹುದಂತೆ. ಆದರೆ ಕೆಲವು ಅರಿಗರು ಇದನ್ನು ನಿರಾಕರಿಸಿದ್ದಾರೆ. ಹಾಗಾಗಿ ಇದೆಯೋ ಇಲ್ಲವೋ ತಿಳಿದಿಲ್ಲ.
3. ನೀರು ಹೇಗೆ ಆವಿಯಾಗುತ್ತದೆ?
ಇಂದಿಗೂ ಯಾವ ಬಿರುಸಿನಲ್ಲಿ ನೆಲದ ಮೇಲಿರುವ ನೀರು ಆವಿಯಾಗುತ್ತದೆ(rate of evaporation) ಎಂದು ತಿಳಿದಿಲ್ಲ. ಅದು ತಿಳಿದರೆ ಮೋಡದಲ್ಲಿ ನೀರಿನ ಹನಿಗಳು ಹೇಗೆ ಹರಡಿಕೊಂಡಿವೆ ಎಂಬುದನ್ನು ಅರಿಯಬಹುದು. ಅದನ್ನು ಅರಿತರೆ ಮೋಡಗಳು ನೇಸರನು ಸೂಸುವ ಬೆಳಕನ್ನು ಹೇಗೆ ತಿರುಗಿಸುತ್ತವೆ, ಹೇಗೆ ಹೀರುತ್ತವೆ ಮತ್ತು ಹೇಗೆ ಚದರಿಸುತ್ತವೆ ಎಂಬುದನ್ನು ತಿಳಿಯಬಹುದು. ಇದು ತಿಳಿದರೆ ನೆಲದ ಬಿಸಿಯಾಗುವಿಕೆಯ(global warming) ಕುರಿತಾಗಿ ಹೆಚ್ಚು ಅರಕೆ ನಡೆಸಬಹುದು.
4. ನೀರಿನ ಮೇಲ್ಮೈಯ pH ಎಶ್ಟು?
ನೀರಿನ pH (ಹುಳಿಯಳತೆ) 7 ಎಂದು ಗೊತ್ತಿದೆ. ಆದರೆ ನೀರಿನ ಮೇಲ್ಮೈ ಯಾವ pH ಅನ್ನು ಹೊಂದಿರುತ್ತದೆ ? ನೀರಿನ ಅಬ್ಬಿಗಳ(water falls) ಸುತ್ತ ಕಾಣುವ ಮಂಜು ಸಾಮಾನ್ಯವಾಗಿ ಕಳತಲೆಯ(negative) OH ಮಿನ್ತುಣುಕುಗಳನ್ನು(ions) ಹೊಂದಿರುತ್ತವೆ. ಅಂದರೆ pH ೭ಕ್ಕಿಂತ ಹೆಚ್ಚು ಎನ್ನಬಹುದು. ಆದರೆ ಇತ್ತೀಚಿನ ಅರಕೆಗಳ ಪ್ರಕಾರ ನೀರಿನ ಮೇಲ್ಮಯ್ ಅರೆ-ಹೈಡ್ರೋಜನ್ ಎಣೆಗಳನ್ನು(broken hydrogen bonds) ಹೊಂದಿರುತ್ತವೆಯಂತೆ. ಹಾಗಾಗಿ ಇವು 7 ಕ್ಕಿಂತ ಕಡಿಮೆ pH ಅನ್ನು ಹೊಂದಿರಬಹುದೆಂದು ಹೇಳಲಾಗುತ್ತಿದೆ. ಹಿಂದಿನ ಬರಹದಲ್ಲಿ ನೋಡಿದಂತೆ ಎಂಜಾಯ್ಂಗಳು, ಪ್ರೋಟೀನುಗಳು ಒಡಲಿನಲ್ಲಿ ಹರಿದಾಡುತ್ತಿರಬೇಕೆಂದರೆ ನೀರು ಮುಕ್ಯ. ಇವೆಲ್ಲವೂ ನೀರಿನ pH ಅನ್ನು ನೆಚ್ಚಿರುತ್ತವೆ. ಆದ್ದರಿಂದ ನೀರಿನ ಮೇಲ್ಮೈಯ pH ತಿಳಿವಳಿಕೆ ಮುಕ್ಯವಾದದ್ದು ಆದರೆ ಆ ತಿಳುವಳಿಕೆ ನಮಗಿನ್ನೂ ಎಟುಕಿಲ್ಲ.
5. ನ್ಯಾನೋ ನೀರು ಬೇರೆಯದೇ ?
ನೀರೆಂದರೆ ನಮಗೆ ತಟ್ಟನೆ ಹೊಳೆಯುವುದು ದೊಡ್ಡದಾದ ಕಡಲುಗಳು ಹರಿಯುವ ಕಾಲುವೆಗಳು. ಆದರೆ ಕಡುಚಿಕ್ಕದಾದ ಎಡೆಗಳಲ್ಲಿ ನೀರನ್ನು ಸೆರೆಹಿಡಿದಾಗ (ಅಂದರೆ ನ್ಯಾನೋ ಮೀಟರ್ ಮಟ್ಟದಲ್ಲಿ) ಅದು ಬೇರೆ ಬಗೆಯ ಗುಣಗಳನ್ನು ತೋರಬಹುದೇ? ಯಾಕೆಂದರೆ ಬರಿಯ ನ್ಯಾನೋಮೀಟರ್ ಅಗಲದಲ್ಲಿ ನೀರನ್ನು ಹಿಡಿದಿಟ್ಟಾಗ ಕೆಲವೇ ಕೆಲವು ಅಣುಕೂಟಗಳಿರುವ ಸಾದ್ಯತೆ ಇರುತ್ತದೆ. ಹೀಗಾದಾಗ ಕ್ವಾಂಟಮ್ ಪರಿಣಾಮಗಳು(quantum effects) ಆ ಅಣುಕೂಟಗಳ ಮೇಲೆ ಬೀರಬಹುದಾದ ಕಾರಣದಿಂದ ಅದರ ಗುಣಗಳು ಮಾರ‍್ಪಾಟಾಗಬಹುದು. ಇದರ ಬಗ್ಗೆ ಇನ್ನಶ್ಟು ಅರಕೆ ನಡೆಯಬೇಕಿದೆ.
(ಸೆಲೆ: nautil.us, 7-themes.com)
ಇತ್ತೀಚಿನ ಅನಿಸಿಕೆಗಳು